ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವುದರ ಜೊತೆಗೆ, ಸಾರ್ವಜನಿಕರ ಸಮಸ್ಯೆಗಳನ್ನು ಸ್ವೀಕರಿಸಿ ತ್ವರಿತವಾಗಿ ಪರಿಹರಿಸಲು ‘ಪ್ರಜಾ ಸೇವಾ ಆಂದೋಲನ’ ಉತ್ತಮ ವೇದಿಕೆಯಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ್ ಮನೀಷಾ ಎನ್ ಪತ್ರಿ ತಿಳಿಸಿದರು.
ಬಾಗೇಪಲ್ಲಿ ತಾಲ್ಲೂಕು ಪಾತಪಾಳ್ಯ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಪಿಂಚಣಿ ಯೋಜನೆ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಂಶವೃಕ್ಷ, ಇ-ಸ್ವತ್ತು ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಸೇವೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದರು.
ಇ-ಸ್ವತ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದ ದೂರುಗಳಿಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ನಂತರವೇ ಇ-ಸ್ವತ್ತು ಮಾಡಿಕೊಡುವ ವ್ಯವಸ್ಥೆ ಇದೆ ಎಂದು ಸ್ಪಷ್ಟಪಡಿಸಿದರು.
ಸಮರ್ಪಕ ದಾಖಲೆಗಳು ಇಲ್ಲದಿದ್ದರೆ ಅರ್ಜಿಯನ್ನು ನಿಯಮಾನುಸಾರ ತಿರಸ್ಕರಿಸಲಾಗುವುದು. ಆದರೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದರೂ ಇ-ಸ್ವತ್ತು ಆಗದೆ ಬಾಕಿ ಉಳಿದಿದ್ದರೆ, ಸಾರ್ವಜನಿಕರು ತಾಲ್ಲೂಕು ಆಡಳಿತದ ಗಮನಕ್ಕೆ ತರಬೇಕು. ಅಂತಹ ಪ್ರಕರಣಗಳನ್ನು ಪರಿಶೀಲಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಪಾತಪಾಳ್ಯ ಕಂದಾಯ ನಿರೀಕ್ಷಕರು ಪ್ರೀತಂ ಮಾತನಾಡಿ ಮನೆ ಬಾಗಿಲಿಗೆ ಆಡಳಿತ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಸರ್ಕಾರದ ಪ್ರಜಾಸೇವೆ ಸಭೆ ನಡೆಸುತ್ತಿದ್ದು, ಸಾರ್ವಜನಿಕರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆ, ಕುಂದುಕೊರತೆಗಳಿಗೆ ಪರಿಹಾರ ಪಡೆದುಕೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದರು.
96 ಅರ್ಜಿಗಳ ಸ್ವೀಕಾರ: ಪ್ರಜಾ ಸೇವಾ ಆಂದೋಲನದಲ್ಲಿ ವಿವಿಧ ಸರ್ಕಾರಿ ಸೇವೆಗಳು ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಒಟ್ಟು 96 ಅರ್ಜಿಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಲಾಯಿತು. ಹೆಚ್ಚಿನ ಅರ್ಜಿಗಳು ಅರಣ್ಯ ಇಲಾಖೆ, ಕಂದಾಯ ಇಲಾಖೆ ಬಂದಿದ್ದವು.
ಕಾರ್ಯಕ್ರಮದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಪಾಲನೆ, ಆರೋಗ್ಯ, ಬೆಸ್ಕಾಂ, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್
ಈ ಸಂದರ್ಭದಲ್ಲಿ ಪಾತಪಾಳ್ಯ ಸಬ್ ಇನ್ಸ್ಪೆಕ್ಟರ್ ಎಚ್.ಕೆ. ಗೋಪಾಲ್, ತಾಲ್ಲೂಕು ಪಂಚಾಯ್ತಿ ಕಛೇರಿಯ ಜಾವೀದ್, ಡಾ,, ವಿನೋದ್ ಕುಮಾರ್, ಪಂಚಾಯ್ತಿ ಕರ ವಸೂಲಿಗಾರ ಗೆಂಗಿರೆಡ್ಡಿ, ಪಾತಪಾಳ್ಯ ರಾಜಸ್ವ ನಿರೀಕ್ಷಕರು ಡಿ.ಆರ್. ಮಾರುತಿ, ವೆಂಕಟೇಶ್, ಶ್ವೇತ, ವಿದ್ಯುತ್ ಇಲಾಖೆಯ ಶ್ರೀನಿವಾಸ್, ಅಂಗನವಾಡಿ ಮೇಲ್ವಿಚಾರಕಿ ಈರವ್ವ, ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.



