ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದರು.
ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕನ್ನಡಪರ ಸಂಘಟನೆಗಳ ಮನವಿಗೆ ಸ್ಪಂದಿಸಿ ಈ ಬಾರಿ ಕರಾಳ ದಿನಾಚರಣೆಗೆ ಅವಕಾಶ ನೀಡದಿರಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ತಿಳಿಸಿದರು.
ರಾಜ್ಯೋತ್ಸವದ ಅಂಗವಾಗಿ ನ. 1ರಂದು ನಡೆಯಲಿರುವ ಭವ್ಯ ಮೆರವಣಿಗೆ ಮಾರ್ಗದುದ್ದಕ್ಕೂ ಕನ್ನಡ ನಾಡಿನ ಮಹನೀಯರ ಭಾವಚಿತ್ರಗಳನ್ನು ಅಳವಡಿಸಲಾಗುವುದು. ವಿವಿಧ ರೂಪಕಗಳಿಗೆ ಪ್ರಶಸ್ತಿ ನೀಡಲಾಗುವುದು. ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಸಭೆಯಲ್ಲಿ ಧ್ವಜಾರೋಹಣ, ಪಥಸಂಚಲನ, ಸಾಧಕರ ಸನ್ಮಾನ, ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಿದ್ಧತೆ ಕುರಿತು ಚರ್ಚಿಸಲಾಯಿತು.



