ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ ಮತದಾರರ ಪಟ್ಟಿಯಿಂದ ತೆಗೆದುಹಾಕುವ ಸಂಚು ನಡೆದಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದ್ದಾರೆ. ಎಸ್ಐಆರ್ ಮೂಲಕ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ದೂರಿದ್ದಾರೆ.
ಸೆ.22, 23 ಮತ್ತು 24ರಂದು ಕೇವಲ ಮೂರು ದಿನಗಳಲ್ಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಫಾರಂ-7 ಅರ್ಜಿಗಳ ಮಹಾಪೂರವೇ ಹರಿದುಬಂದಿದೆ. ಮುಸ್ಲಿಮರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮತದಾರರನ್ನು ಗುರಿಯಾಗಿಸಿಕೊಂಡು ಹೆಸರುಗಳನ್ನು ತೆಗೆದುಹಾಕಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಸಮುದಾಯಗಳ ಬಹುತೇಕರು ಬಿಜೆಪಿಗೆ ವಿರುದ್ಧವಾಗಿ ಮತ ಚಲಾಯಿಸುತ್ತಾರೆ ಎಂಬ ಕಾರಣಕ್ಕೆ ಅವರನ್ನು ಗುರಿಯಾಗಿಸಲಾಗಿದೆ ಎಂದು ರಾಹುಲ್ ಗಾಂಧಿ ದೂರಿದ್ದಾರೆ. ದೇಶದಾದ್ಯಂತ ಮತ ಕಳ್ಳತನದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದರೂ ಬಿಜೆಪಿ ಹಾಗೂ ಚುನಾವಣಾ ಆಯೋಗ ಇದೇ ರೀತಿಯ ಕ್ರಮಗಳನ್ನು ಮುಂದುವರಿಸುತ್ತಿವೆ ಎಂದು ಕಿಡಿಕಾರಿದ್ದಾರೆ.
ತಂತ್ರಾಂಶದ ನೆರವಿನಿಂದ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಮತದಾರರ ಹೆಸರುಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸುವ ವಿಧಾನವನ್ನು ತಾವು ಈ ಹಿಂದೆಯೇ ಬಹಿರಂಗಪಡಿಸಿದ್ದಾಗಿ ಅವರು ಹೇಳಿದ್ದಾರೆ. ಬಿಜೆಪಿ ಹಾಗೂ ಚುನಾವಣಾ ಆಯೋಗಕ್ಕೆ ಸೇರಿದವರು ಶಾಮೀಲಾಗಿ, ಆಯ್ದ ಮತದಾರರ ವಿರುದ್ಧ ಸ್ವಯಂಚಾಲಿತವಾಗಿ ಫಾರಂ-7 ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಈ ಪ್ರಕ್ರಿಯೆಯನ್ನು ಮೇಲ್ಮಟ್ಟದಿಂದಲೇ ನಿಯಂತ್ರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ನಾಯಕರು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಆದರೆ, ಎಫ್ಐಆರ್ ದಾಖಲಿಸಲು ಮುಖ್ಯ ಚುನಾವಣಾಧಿಕಾರಿ ನಿರಾಕರಿಸುತ್ತಿರುವುದೇಕೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾಫಿ ಸಾಕ್ಷಿಯಾಗಬೇಕು. ಅವರ ಹೇಳಿಕೆ ಆಧರಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತನಿಖೆ ನಡೆಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.



