ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ, ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಅಂದರೆ, ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ವರ್ಷ ಮುಂಗಾರು ಮಾತ್ರವಲ್ಲ, ಹಿಂಗಾರು ಮಳೆ ಕೂಡ ಸುಮಾರು 30%ರಷ್ಟು ಕೊರತೆಯಾಗಲಿದೆ ಎಂದು ಹವಾಮಾನ ತಜ್ಞರು ಆರಂಭಿಕ ಅಂದಾಜು ಮಾಡಿದ್ದಾರೆ. ಆದಾಗ್ಯೂ, ಹಿಂಗಾರಿನ ಆರಂಭದಲ್ಲಿಯೇ ಬಂಗಾಳಕೊಲ್ಲಿ ವಾಯುಭಾರ ಕುಸಿದಿರುವ ಪರಿಣಾಮ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಹಾಗೂ ಕೇರಳದಲ್ಲಿ ಮಳೆ ಅಬ್ಬರ ಜೋರಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ತುಮಕೂರು, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಇನ್ನು, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಮಳೆಯಿಂದಾಗಿ ರಾಜ್ಯದಾದ್ಯಂತ ಹವಾಮಾನದಲ್ಲಿ ಭಾರೀ ಬದಲಾವಣೆಗಳು ಕಂಡುಬಂದಿವೆ. ಹಲವೆಡೆ ಮೋಡ ಕವಿದ ವಾತಾವರಣ ಮುಂದುವರಿದಿದೆ. ಬಿಸಿಲಿನಿಂದ ಸುಡುತ್ತಿದ್ದ ಬೆಂಗಳೂರು ನಗರದಲ್ಲಿ ತಾಪಮಾನವು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದೆ. ಗಾಳಿಯೂ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬೀಸುತ್ತಿದೆ. ಸಂಜೆ ವೇಳೆ, ಮಳೆ ಸುರಿಯುತ್ತಿದೆ.



