ಸಾಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ ಬೆಳಗ್ಗೆ ಘಟನೆ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ಸು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತಿತ್ತು. ಲಾರಿ ಆನಂದಪುರದಿಂದ ಸಾಗರ ಕಡೆಗೆ ಹೋಗುತಿತ್ತು. ಅಪಘಾತದಲ್ಲಿ ಹಲವರಿಗೆ ಗಾಯವಾಗಿದೆ.
ಕಚೇರಿ, ಶಾಲೆ, ಕಾಲೇಜು ಸಮಯವಾದ್ದರಿಂದ ಬಸ್ಸಿನಲ್ಲಿ ವಿದ್ಯಾರ್ಥಿಗಳು ಮತ್ತು ಕಚೇರಿಗೆ ತೆರಳುವವರೆ ಹೆಚ್ಚಿದ್ದರು ಎಂದು ತಿಳಿದು ಬಂದಿದೆ.

ಅಪಘಾತವಾದ ಕೂಡಲೆ ಸ್ಥಳೀಯರು ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ.ಸಾಗರದ ಮರ್ಕಜ್ ಶಾಲೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಕೂಡಲೆ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳೀಯರು ತಕ್ಷಣ ನೆರವು ನೀಡಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಅಪಘಾತದಿಂದಾಗಿ ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಹಾಗಾಗಿ ಹೆದ್ದಾರಿಯಲ್ಲಿ ಬಹು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಪ್ರಕರಣ ಆನಂದಪುರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದ್ದು ಬಸ್ ನ ಮುಂಭಾಗ ನುಜ್ಜುಗುಜ್ಜಾಗಿದೆ.ಬಸ್ ನಲ್ಲಿದ್ದ 12 ಜನ ಪ್ರಯಾಣಿಕರಿಗೆ ಗಾಯಗಳಾಗಿವೆ.
ಚಾಲಕ ರವೀಂದ್ರ ನಾಯ್ಕ ಮತ್ತು ನಿರ್ವಾಹಕ ಫಕೀರಪ್ಪನವರಿಗೆ ತೀವ್ರ ಗಾಯಗಳಾಗಿದ್ದು ಅವರನ್ನ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ