ರಾಜ್ಯದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ನಡೆದು ಬಹಳ ಸಮಯ ಕಳೆದಿದ್ದರೂ ಚುನಾವಣೆಗಳು ಇನ್ನೂ ನಡೆಯದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ನಡುವೆ ಪ್ರಕಟವಾಗಿರುವ ಪಂಚಾಯತ್ ಕ್ಷೇತ್ರಗಳ ಕರಡು ಮೀಸಲಾತಿ ಪಟ್ಟಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪುರುಷ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ಸಿಗದಿರುವ ವಿಚಾರವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ಉಡುಪಿ ಜಿಲ್ಲಾ ಘಟಕವು ಪ್ರಶ್ನಿಸಿದ್ದು, ಮೀಸಲಾತಿ ಪಟ್ಟಿಯನ್ನು ಮರುಪರಿಶೀಲಿಸುವಂತೆ ಆಗ್ರಹಿಸಿದೆ.
ಈ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಸಮಿತಿಯ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಉಡುಪಿ ಜಿಲ್ಲೆಯ ತಾಲೂಕು ಪಂಚಾಯತ್ ಕ್ಷೇತ್ರಗಳ ಕರಡು ಮೀಸಲಾತಿ ಪಟ್ಟಿಯನ್ನು ಪರಿಶೀಲಿಸಿದಾಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪುರುಷ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶವಿಲ್ಲದಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದರು.
ಜಿಲ್ಲೆಯ ಪ್ರತಿ ತಾಲೂಕು ಪಂಚಾಯತ್ನಲ್ಲಿ ಸುಮಾರು 15ರಿಂದ 16 ಕ್ಷೇತ್ರಗಳಿರುವ ಸಾಧ್ಯತೆಯಿದೆ. ಇಷ್ಟೊಂದು ಕ್ಷೇತ್ರಗಳಿದ್ದರೂ ಜಿಲ್ಲೆಯ ಸಮಗ್ರ ಚಿತ್ರಣವನ್ನು ಗಮನದಲ್ಲಿಟ್ಟುಕೊಂಡು ಕನಿಷ್ಠ ಎರಡು ಅಥವಾ ಮೂರು ಕ್ಷೇತ್ರಗಳಲ್ಲಾದರೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪುರುಷ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕಿತ್ತು. ಆದರೆ, ಪ್ರಸ್ತುತ ಮೀಸಲಾತಿ ಪಟ್ಟಿಯಲ್ಲಿ ಅಂತಹ ಅವಕಾಶ ಕಂಡುಬರದಿರುವುದು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಮರುಪರಿಶೀಲನೆಗೆ ಒಳಪಡಬೇಕಾದ ವಿಚಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಮಹಿಳಾ ಮೀಸಲಾತಿಗೆ ವಿರೋಧವಿಲ್ಲ, ಪುರುಷ ಕಾರ್ಯಕರ್ತರಿಗೂ ಅವಕಾಶ ಬೇಕು
ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದನ್ನು ತಮ್ಮ ಸಂಘಟನೆ ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಮಂಜುನಾಥ ಗಿಳಿಯಾರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೂ ರಾಜಕೀಯದಲ್ಲಿ ಅವಕಾಶ ದೊರೆಯಬೇಕು. ಅವರು ಸಮರ್ಥವಾಗಿ ಜನಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಬಲ್ಲರು ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.
ಆದರೆ, ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪುರುಷ ಕಾರ್ಯಕರ್ತರಿಗೂ ರಾಜಕೀಯ ನಾಯಕತ್ವದಲ್ಲಿ ಭಾಗವಹಿಸುವ ಅವಕಾಶ ದೊರೆಯಬೇಕು. ಹಲವು ವರ್ಷಗಳಿಂದ ಸಮಾಜದ ವಿವಿಧ ಸಮಸ್ಯೆಗಳ ವಿರುದ್ಧ ಹೋರಾಡುತ್ತಿರುವ ಇಂತಹ ಕಾರ್ಯಕರ್ತರು ರಾಜಕೀಯ ಕ್ಷೇತ್ರದಲ್ಲಿಯೂ ಗುರುತಿಸಿಕೊಳ್ಳುವ ಆಕಾಂಕ್ಷೆ ಹೊಂದಿದ್ದಾರೆ. ವಿವಿಧ ರಾಜಕೀಯ ಪಕ್ಷಗಳ ವೇದಿಕೆಗಳಲ್ಲಿ ಸಕ್ರಿಯರಾಗಿರುವ ಅವರಿಗೆ ಸ್ಥಳೀಯ ಆಡಳಿತ ವ್ಯವಸ್ಥೆಯಲ್ಲಿ ಸ್ಪರ್ಧಿಸಲು ಅವಕಾಶ ದೊರೆಯುವುದು ಅಗತ್ಯವಾಗಿದೆ ಎಂದು ಅವರು ಒತ್ತಾಯಿಸಿದರು.
ಆಕ್ಷೇಪಣೆ ಸಲ್ಲಿಕೆಗೆ ಮುನ್ನ ಮರುಪರಿಶೀಲನೆಗೆ ಒತ್ತಾಯ
ತಾಲೂಕು ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಪಟ್ಟಿ ಇನ್ನೂ ಕರಡು ಹಂತದಲ್ಲಿರುವುದರಿಂದ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಚುನಾವಣಾ ಆಯೋಗವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪುರುಷ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸುವ ಸಾಧ್ಯತೆಗಳನ್ನು ಪರಿಶೀಲಿಸಬೇಕು. ಜಿಲ್ಲೆಯ ಕನಿಷ್ಠ ಎರಡು ಅಥವಾ ಮೂರು ಕ್ಷೇತ್ರಗಳಲ್ಲಾದರೂ ಸೂಕ್ತ ಅವಕಾಶ ದೊರೆಯುವಂತೆ ಮೀಸಲಾತಿ ಪಟ್ಟಿಯನ್ನು ಮರುಪರಿಶೀಲಿಸಬೇಕು ಎಂದು ಮಂಜುನಾಥ ಗಿಳಿಯಾರು ಆಗ್ರಹಿಸಿದರು.
ಈ ವಿಚಾರವಾಗಿ ಅನೇಕ ಕಾರ್ಯಕರ್ತರು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ನಮ್ಮ ಬೇಡಿಕೆಯನ್ನು ಪರಿಗಣಿಸದಿದ್ದರೆ ನಿಯಮಾನುಸಾರ ಲಿಖಿತ ಆಕ್ಷೇಪಣೆ ಸಲ್ಲಿಸಲಾಗುವುದು. ಅಲ್ಲದೆ, ಈ ನೀತಿಯ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.





