ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಗಳು ಕಂಡುಬಂದಿವೆ. ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ದಕ್ಷಿಣ ಒಳನಾಡಿನಿಂದ ತಮಿಳುನಾಡಿನ ಮೂಲಕ ನೈರುತ್ಯ ಬಂಗಾಳ ಕೊಲ್ಲಿಯವರೆಗೆ ಹವಾಮಾನ ವೈಪರೀತ್ಯ ಎದುರಾಗಿದೆ. ಪರಿಣಾಮ, ರಾಜ್ಯದ ಒಟ್ಟು 17 ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮೈಸೂರು, ಕೊಡಗು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ವಿಜಯನಗರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ವಿಶೇಷವಾಗಿ ದಕ್ಷಿಣ ಒಳನಾಡಿನ ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ. ಈ ಮೂರು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಸಿಡಿಲು ಮತ್ತು ಗುಡುಗು ಸಹಿತ ತೀವ್ರ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವಿವರಿಸಿದೆ. ಆರೆಂಜ್ ಅಲರ್ಟ್ ಘೋಷಿಸಿದೆ.
ಇನ್ನುಳಿದಂತೆ ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ವಿಜಯನಗರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿಯೂ ಸಹ ಮಳೆಯ ವಾತಾವರಣ ಮುಂದುವರಿಯಲಿದೆ. ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸೂಚನೆಯಿದ್ದರೂ, ಯಾವುದೇ ಅಪಾಯದ ಎಚ್ಚರಿಕೆ ಇಲಾಖೆ ನೀಡಲಾಗಿಲ್ಲ. ಮತ್ತೊಂದೆಡೆ, ಉತ್ತರ ಒಳನಾಡಿನ ಭಾಗಗಳಲ್ಲಿ ಮಳೆಯ ಪ್ರಭಾವ ತೀವ್ರವಾಗಿ ಕ್ಷೀಣಿಸಿದ್ದು, ಬಹುತೇಕ ಕಡೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.



