ದೇಶಾದ್ಯಂತ ಸುದ್ದಿಯಾಗಿದ್ದ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಡಬ್ಲ್ಯುಎಫ್ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ಗೆ ದೆಹಲಿಯ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ವಿನೋದ್ ತೋಮರ್ಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಎರಡು ದಿನಗಳ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯು ಜು. 20ರಂದು ನಡೆಯಲಿದೆ ಎಂದು ಹೇಳಿದೆ.
ಕಳೆದ ಜೂನ್ 15ರಂದು ದೆಹಲಿ ಪೊಲೀಸರು ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿ, ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಉಲ್ಲೇಖಿಸಿದ್ದರು.
ಬ್ರಿಜ್ ಭೂಷಣ್ ಅವರಲ್ಲದೆ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರ ಹೆಸರೂ ಸೇರಿಸಿ ಮಹಿಳಾ ಕುಸ್ತಿಪಟುಗಳು ಇಬ್ಬರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.