ಭಾರತದೊಂದಿಗೆ ಕದನ ವಿರಾಮ ಘೋಷಣೆಯಾದ ಸ್ವಲ್ಪ ಸಮಯದ ನಂತರ, ಪಾಕಿಸ್ತಾನವು ತನ್ನ ವಾಯುಪ್ರದೇಶವನ್ನು ಎಲ್ಲಾ ರೀತಿಯ ಸಂಚಾರಕ್ಕಾಗಿ ತೆರೆಯುವುದಾಗಿ ಘೋಷಿಸಿದೆ. ಕದನ ವಿರಾಮ ಬೆನ್ನಲ್ಲೇ ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರ (ಪಿಎಎ) ಈ ಘೋಷಣೆ ಮಾಡಿದೆ.
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಸೇರಿ 26 ಮಂದಿ ಸಾವನ್ನಪ್ಪಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಟಿಆರ್ಎಫ್ ಹೊತ್ತುಕೊಂಡಿತ್ತು. ಈ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರವನ್ನು ನಡೆಸಿದೆ.
ಇದನ್ನು ಓದಿದ್ದೀರಾ? BREAKING NEWS | ‘ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ’ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್
ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು ದಾಳಿ ಪ್ರತಿದಾಳಿ ನಡೆಯುತ್ತಲೇ ಇತ್ತು. ಸದ್ಯ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆ ಬಳಿಕ ಕದನ ವಿರಾಮಕ್ಕೆ ಉಭಯ ದೇಶಗಳು ಒಪ್ಪಿಕೊಂಡಿದೆ.
ಈ ಬೆನ್ನಲ್ಲೆ “ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಸಾಮಾನ್ಯ ವಿಮಾನ ಕಾರ್ಯಾಚರಣೆ ನಡೆಸಬಹುದು. ಪ್ರಯಾಣಿಕರು ತಮ್ಮ ವಿಮಾನಗಳ ಇತ್ತೀಚಿನ ವೇಳಾಪಟ್ಟಿಗಾಗಿ ಸಂಬಂಧಿತ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಬೇಕು” ಎಂದು ಪಿಎಎ ತಿಳಿಸಿದೆ.
ಭಾರತದೊಂದಿಗಿನ ಉದ್ವಿಗ್ನತೆಯಿಂದಾಗಿ ಪಾಕಿಸ್ತಾನದ ವಾಯುಪ್ರದೇಶವನ್ನು ಮುಚ್ಚಲಾಗಿತ್ತು. ಇದರಿಂದಾಗಿ ನಿಯಮಿತ ವಾಯು ಸಂಚಾರಕ್ಕೆ ಅಡ್ಡಿಯಾಗಿತ್ತು, ಪ್ರಯಾಣಿಕರಿಗೆ ತೊಂದರೆಯಾಗಿತ್ತು.
