ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್ ವಿದ್ಯಾರ್ಥಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಹಲವರು ವಿದ್ಯಾರ್ಥಿ ವೇತನದಿಂದ ವಂಚಿತರಾಗಿದ್ದು, ಕೂಡಲೇ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಅಪ್ನಿ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಸದ್ದಮ್ ಹುಸೇನ್ ಒತ್ತಾಯಿಸಿದ್ದಾರೆ.
ಈ ಕುರಿತು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್ ಅವರಿಗೆ ಮನವಿ ಸಲ್ಲಿಸಿರುವ ಅವರು, “2021ನೇ ಸಾಲಿನ ಎಂಬಿಬಿಎಸ್ ವಿದ್ಯಾರ್ಥಿಗಳ ಬಾಕಿ ಉಳಿದಿರುವ ಶೈಕ್ಷಣಿಕ ವರ್ಷಗಳ ವಿದ್ಯಾರ್ಥಿವೇತನದ ಜೊತೆಗೆ ಇಂಟರ್ನ್ಶಿಪ್ ಅವಧಿಯ ವಿದ್ಯಾರ್ಥಿವೇತನವನ್ನೂ ಮಂಜೂರು ಮಾಡಲು ವಿಶೇಷ ಅವಕಾಶ ಕಲ್ಪಿಸಬೇಕು” ಎಂದು ಮನವಿ ಮಾಡಿದ್ದಾರೆ.
ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳ ಪ್ರವೇಶ ಹಾಗೂ ಶೈಕ್ಷಣಿಕ ಪ್ರಕ್ರಿಯೆಗಳಲ್ಲಿ ವಿಳಂಬ ಉಂಟಾದ ಕಾರಣ ನಿಗದಿತ ಅವಧಿಯಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಇದರಿಂದ ಅರ್ಹ ವಿದ್ಯಾರ್ಥಿಗಳು ಸೌಲಭ್ಯದಿಂದ ವಂಚಿತರಾಗುವಂತಾಗಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿವೇತನದ ಜಾಲತಾಣವನ್ನು ಪುನಃ ತೆರೆದು ಬಾಕಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಬೇಕು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಗಮನಕ್ಕೆ ತರುವ ಮೂಲಕ ಅಲ್ಪಸಂಖ್ಯಾತ ಸಮುದಾಯದ ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ





